ಬೆಂಗಳೂರು : ರಾಜ್ಯದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಅವರು, ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಸಿದ್ಧತೆ ಹಾಗೂ ನಿಗಮ- ಮಂಡಳಿ ನೇಮಕದ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ. ಮಂಗಳವಾರ ಬೆಳಗ್ಗೆ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆಯುವ ಸಾಧ್ಯತೆಯಿದೆ.
ಬಳಿಕ ಮಧ್ಯಾಹ್ನ 1 ಗಂಟೆಗೆ ಮೂವರೂ ನಾಯಕರು ಪ್ರತ್ಯೇಕ ಸಭೆ ನಡೆಸಿ ನಿಗಮ-ಮಂಡಳಿ ನೇಮಕದಲ್ಲಿ ಕಾರ್ಯಕರ್ತರಿಗೆ ಆದ್ಯತೆ ನೀಡುವ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲಿದ್ದಾರೆ. ಇದರ ಆಧಾರದ ಮೇಲೆ ಕಾರ್ಯಕರ್ತರ ಪಟ್ಟಿಯನ್ನು ಹೈಕಮಾಂಡ್ ಕಳುಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಳಿಕ ಜ.10 ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಕೆಪಿಸಿಸಿಯು ವೀಕ್ಷಕರನ್ನಾಗಿ ನೇಮಿಸಿರುವ ಸಚಿವರು ತಮಗೆ ಸೂಚಿಸಿರುವ ಲೋಕಸಭೆ ಕ್ಷೇತ್ರದಲ್ಲಿ ಸಂಭಾವ್ಯರ ಪಟ್ಟಿ ಸಿದ್ದಪಡಿಸಲು ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪರಿಶೀಲಿಸುವ ಸಾಧ್ಯತೆಯಿದೆ.
ಇನ್ನು ಅದೇ ದಿನ ಸಂಜೆ 4 ಗಂಟೆಗೆ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.