ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಇದೀಗ ಎಸ್ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ತಮ್ಮ ಕಚೇರಿಗೆ ಕರೆದೋಯ್ದಿದ್ದಾರೆ.
ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕೋರ್ಟ್ ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಮೂರು ಪೋಲಿಸ್ ವಾಹನಗಳಲ್ಲಿ ಬಂದಿದ್ದ ಎಸ್ಐಟಿ ಅಧಿಕಾರಿಗಳ ತಂಡ
ಮೊದಲು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಬಳಿಕ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಪೊಲೀಸರು ಅವರನ್ನು ಮತ್ತೆ ಬಂಧಿಸಿದ್ದರು. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ಬಾಡಿ ವಾರೆಂಟ್ ಮೇಲೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಶಾಸಕ ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಂಡು ತಮ್ಮ ಕಚೇರಿಗೆ ಕರೆದೊಯ್ದಿದ್ದಾರೆ.