ಕೇರಳ : ಭಾರೀ ಮಳೆಯ ಆರ್ಭಟಕ್ಕೆ ಕೇರಳದ ಎಂಟು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ.
ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವುದರಿಂದ ಅನೇಕ ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.
ಪಥನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ತಿರುವನಂತಪುರಂ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಅತಿ ಉದ್ದದ ನದಿ ಪೆರಿಯಾರ್ ಉಕ್ಕಿ ಹರಿಯಿತು ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ಪ್ರವಾಹ ಭೀತಿ ಎದುರಿಸುತ್ತಿವೆ. ನಿರಂತರ ಮಳೆಯಿಂದಾಗಿ ಚಲಕುಡಿ, ಪಂಪಾ, ಮಣಿಮಾಲಾ ಮತ್ತು ಅಚಂಕೋವಿಲ್ ಸೇರಿದಂತೆ ಇತರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಲಕ್ಕುಡಿ ನದಿಯ ದಡದಲ್ಲಿರುವ ನಿವಾಸಿಗಳಿಗೆ ಅಧಿಕಾರಿಗಳ ಸೂಚನೆಯಂತೆ ಸ್ಥಳಾಂತರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದರು. ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ, ಏಕೆಂದರೆ ಆ ಪ್ರದೇಶದಲ್ಲಿ ಜನರು ಓಡಾಡೋದಕ್ಕೆ ಭಯದ ವಾತಾವರಣ ನಿರ್ಮಾಣಗೊಂಡಿದೆ.
ಇಡುಕ್ಕಿಯ ಪೊನ್ಮುಡಿ, ಲೋವರ್ ಪೆರಿಯಾರ್, ಕಲ್ಲರ್ಕುಟ್ಟಿ, ಎರತ್ತಯಾರ್ ಮತ್ತು ಕುಂಡಾಲ ಮತ್ತು ಪಥನಂತಿಟ್ಟ ಜಿಲ್ಲೆಯ ಮೂಝಿಯಾರ್ ಎಂಬ ಆರು ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಮಟ್ಟವು ಆತಂಕಕಾರಿ ಮಟ್ಟವನ್ನು ತಲುಪಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮಾಹಿತಿ ನೀಡಿದೆ
ಭಾರೀ ಮಳೆಯಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಭೂಕುಸಿತಗಳು ಸಂಭವಿಸಿದ್ದು, ಇದು ರಸ್ತೆ ಸಂಚಾರದ ಮೇಲೂ ಪರಿಣಾಮ ಬೀರಿದೆ.