ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಆರೋಪಿಗಳಾದ ಪುಟ್ಟಸ್ವಾಮಿ ಅಲಿಯಾಸ್ ಪವನ್, ಧನರಾಜ್, ನಂದೀಶ್ ಮತ್ತು ವಿ.ವಿನಯ್ ಅವರಿಗೆ ಜಾಮೀನು ಮಂಜೂರು ಮಾಡಿ ನಗರದ 56ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2024ರ ಡಿ.23ರಂದು ಆದೇಶ ಹೊರಡಿಸಿದೆ. ಈ ಆದೇಶ ಪ್ರಶ್ನಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು (ರಾಜ್ಯ ಸರ್ಕಾರ) ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ವೇಳೆ ಸರ್ಕಾರಿ ವಕೀಲರು, ಪ್ರಕರಣವು ಅತ್ಯಂತ ಹೀನವಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದರಿಂದ ಆ ಏಳು ಮಂದಿ ಆರೋಪಿಗಳು ಮರಳಿ ಜೈಲು ಸೇರಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಈ ನಾಲ್ವರು ಆರೋಪಿಗಳಿಗೆ ಮಂಜೂರಾಗಿರುವ ಜಾಮೀನು ರದ್ದುಪಡಿಸಬೇಕು ಎಂದು ಕೋರಿದರು.
ಜಾಮೀನು ಅರ್ಜಿಗಳ ಕುರಿತು ವಿವೇಚನೆ ಬಳಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ಹೈಕೋರ್ಟ್‌ಗೆ ಇರುತ್ತದೆ. ಅಂದಮಾತ್ರಕ್ಕೆ ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾತಿ ಆದೇಶ ಎತ್ತಿಹಿಡಿಯಲಾಗುತ್ತದೆ ಎಂದರ್ಥವಲ್ಲ. ವಿಶೇಷವಾಗಿ ಈ ಪ್ರಕರಣ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದು, ನ್ಯಾಯಾಲಯವೂ ಅದರ ಪ್ರಭಾವಕ್ಕೂ ಒಳಗಾಗಬೇಕಿಲ್ಲ ಎಂದು ಪೀಠ ಮೌಖಿಕವಾಗಿ ಹೇಳಿತು.








