ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ. ಜನರಿಗೋಸ್ಕರ ಕೆಲಸ ಮಾಡುತ್ತಿದೆ. ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನೆರವು ಪಡೆದ ಲಕ್ಷಾಂತರ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಪಕ್ಷ ಹಾಗೂ ಸರ್ಕಾರದ ಕಾರ್ಯ ವೈಖರಿಯನ್ನು ಮೆಚ್ಚಿ ಸಂದೇಶ ಕಳುಹಿಸಲಿದ್ದಾರೆ ಎಂದು ತಿಳಿಸಿದರು.
‘ಬೆಸ್ಕಾಂ ಗ್ರಾಹಕ’ರಿಗೆ ಗುಡ್ ನ್ಯೂಸ್: ಉಚಿತವಾಗಿ ಗ್ರಾಹಕ ಸ್ನೇಹಿ ‘ಡಿಜಿಟಲ್ ಮೀಟರ್’ ಅಳವಡಿಕೆ
ಯಾವುದೇ ಒಂದು ಸಮುದಾಯದಿಂದ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಸಮುದಾಯದ ಒಟ್ಟಾರೆ ಅಭಿಪ್ರಾಯ ಇರಬೇಕು. ಉಳಿದ ಸಮುದಾಯಗಳ ವಿಶ್ವಾಸ ಗಳಿಸಬೇಕು. ಜನರ ನಾಯಕತ್ವದ ಮೇಲೆ ನಂಬಿಕೆ ಇಟ್ಟವರು ಮಾತ್ರ ಮುಖ್ಯಮಂತ್ರಿಯಾಗಬಹುದು. ಯಾವುದೇ ಸಮುದಾಯಕ್ಕೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ. ಸಚಿವರಾಗಿ ಅನುಭವವಿದ್ದಂತಹ ಜಮೀರ್ ಅಹ್ಮದ್ರಿಂದ ಒಕ್ಕಲಿಗರಿಗೆ ನೋವಾಗುವಂತಹ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ರಾಜಕಾರಣಿಗಳು ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು ಎಂದು ಹೇಳಿದರು.
ಒಕ್ಕಲಿಗ ಸಮುದಾಯ ಕೃಷಿಕರ ಸಮುದಾಯ. ಕೃಷಿಕರು ದೇಶದ ಬೆನ್ನೆಲುಬು. ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆ ಒಳ್ಳೆಯ ವಿಶ್ವಾಸ ಇಟ್ಟುಕೊಂಡು, ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ. ಕಾಯಕವನ್ನೇ ನಂಬಿರುವ ಸಮುದಾಯವಿದು. ಜಮೀರ್ ಹೇಳಿಕೆಯಿಂದ ಅವರಿಗೆ ಹಾಗೂ ಅವರ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ವೇಳೆ ಬಾಯಿ ಬಡಿದುಕೊಂಡರೂ ಪ್ರಯೋಜನ ಆಗಲಿಲ್ಲ. ಈಗ ಮೌನಕ್ಕೆ ಶರಣಾಗಿದ್ದಾರೆ. 54 ವರ್ಷ ಆಡಳಿತ ಮಾಡಿದ್ದ ಕಾಂಗ್ರೆಸ್ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ವಾ? ಆಗ ಎಲ್ಲವೂ ಸರಿ ಇತ್ತು ಅನ್ನುವವರು ಈಗೇಕೆ ಸಂದೇಹ ಪಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗಲೇ 8-10 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಅಮಿತ್ ಶಾ ಅವರನ್ನು ಗಡಿಪಾರು ಮಾಡಲಾಗಿತ್ತು. ಕಾಂಗ್ರೆಸ್ನ ದ್ವಿಮುಖ ನೀತಿಯನ್ನು ಜನರು ಒಪ್ಪಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದವರು ಮಾತ್ರ ತನಿಖೆ, ವಿಚಾರಣೆಗೆ ಸಹಕರಿಸುತ್ತಾರೆ. ಒಂದು ವೇಳೆ ನ್ಯಾಯ ಸಿಕ್ಕಿಲ್ಲ ಎಂದರೆ ಕೋರ್ಟ್ ವ್ಯವಸ್ಥೆ ನಮ್ಮ ದೇಶದಲ್ಲಿದೆ ಎಂದು ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ಕಿಡಿಕಾರಿದರು.
ಯಾರು ಬೇಕಾದರೂ ‘ಶ್ರೀಮಂತ’ರಾಗಬಹುದು: ಅದೇಗೆ ಎನ್ನುವ ‘ಸಿಂಪಲ್ ಮಾಹಿತಿ’ ಇಲ್ಲಿದೆ.!