ಬೆಂಗಳೂರು : ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಲ್ವರು ಸಚಿವರಿಂದ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್, ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಈ ಒಂದು ಜಂಟಿ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಒಂದು ಸುದ್ದಿಗೋಷ್ಠಿ ಭಾರಿ ಮಹತ್ವವನ್ನು ಪಡೆದುಕೊಂಡಿದೆ.
ಈ ಕುರಿತಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಅಂತ ತಿಳಿಸಿದ್ದಾರೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ತಾತ್ಕಾಲಿಕ ತಡೆ
ಇದಾದ ಬಳಿಕ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಗಿದ್ದು, ಅದರಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.