ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಉಂಟಾದ ಗೊಂದಲ ಇಂದು ಮತ್ತಷ್ಟು ತೀವ್ರಗೊಂಡಿದ್ದು, ಸಭೆಯಲ್ಲೇ ರಾಜೀನಾಮೆ ಬೆದರಿಕೆ ವ್ಯಕ್ತವಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಹೌದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಚಿವ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿ ಅಚ್ಚರಿ ಮೂಡಿಸಿದರು.t ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದ ಚರ್ಚೆಯ ವೇಳೆ, ಆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದರು.
ಕ್ಷೇತ್ರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವುದರಿಂದ ಸಮುದಾಯದ ಬೇಡಿಕೆಗೆ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುರ್ಜೆವಾಲಾ, ಕಾಂಗ್ರೆಸ್ ಪಕ್ಷವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿ, ಯೋಗ್ಯ ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.
ಈ ಮೂಲಕ ಜಮೀರ್ ಅವರ ರಾಜೀನಾಮೆ ಬೆದರಿಕೆಯನ್ನು ತಳ್ಳಿಹಾಕಿದಂತಾಯಿತು.ಇದೇ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಘೋಷಣೆಗೆ ಮುನ್ನವೇ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಸಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ. ಇದರಿಂದ ಮುಸ್ಲಿಂ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಭೆಯಲ್ಲಿ ತೀವ್ರ ವಾಗ್ವಾದಕ್ಕೂ ಕಾರಣವಾಯಿತು.








