ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಕರ್ನಾಟಕ ವಿಧಾನಸಭೆಯಲ್ಲಿ ಹೊಳೆನರಸೀಪುರವನ್ನು ಪ್ರತಿನಿಧಿಸುವ ರೇವಣ್ಣ ಅವರನ್ನು ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ (ಎಸ್ಐಟಿ) ಮೇ 4 ರಂದು ಬಂಧಿಸಿತ್ತು.
ಇನ್ನೂ ಜೈಲಿನಲ್ಲಿರುವ ರೇವಣ್ಣನವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸದ್ಯ ಅವರಿಗೆ ಜೈಲಿನ ವೈದ್ಯರೇ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.