ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಇಂದಿಗೆ 1 ವರ್ಷ ಪೂರೈಕೆಯಾಗಿದ್ದು, ಈವರೆಗೆ ಮಹಿಳೆಯರಿಗೆ 25,248 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.
2023 ರ ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಸುಮಾರು 1.25 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. 2023 ರ ಆ.30 ರಂದು ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು.
ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಹೊಂದಿರುವ ಕುಟುಂಬದ ಒಬ್ಬ ಮಹಿಳೆ ಮಾತ್ರ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಫಲಾನುಭವಿಗಳಿದ್ದು, ಇಲ್ಲಿ 9,83,766 ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಳಿಕ ಬೆಂಗಳೂರು ನಗರ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು, ಇಲ್ಲಿ 8,20,194, ಮೈಸೂರು ಜಿಲ್ಲೆಯಲ್ಲಿ 6,70,22 ಹಾಗೂ ಕೊನೆಯ ಸ್ಥಾನದಲ್ಲಿ ಕೊಡಗು ಜಿಲ್ಲೆಯಲ್ಲಿ 1,15,425 ಮಹಿಳೆಯರು ಮಾತ್ರ ಫಲಾನುಭವಿಗಳಾಗಿದ್ದಾರೆ.