ಉಡುಪಿ : ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಸಚಿವರು, 024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಿ, ಜಗತ್ತಿನ ಚರಿತ್ರೆಯಲ್ಲಿ ಮೊದಲ ಬಾರಿಗೆ ಅಹಿಂಸೆಯ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮಾ ಗಾಂಧೀಜಿಯವರು ಉಡುಪಿಗೆ ಆಗಮಿಸಿ, ಅಜ್ಜರಕಾಡಿನಲ್ಲಿ ದೇಶ ಪ್ರೇಮಿಗಳ ಹೋರಾಟಕ್ಕೆ ಕರೆ ನೀಡಿದ್ದು ಮರೆಯಲಾಗದ ಘಟನೆ. ಅದರ ಸ್ಮಾರಕವೂ ಈ ನೆಲದಲ್ಲಿ ಇಂದು ಚಿರಸ್ಥಾಯಿಯಾಗಿದೆ. ಜಾತಿ-ಮತ ಭೇಧವಿಲ್ಲದೇ ಉಡುಪಿ ಜಿಲ್ಲೆಯ ಜನರು ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯಂತಹ ನಾಯಕರ ಕರೆಗೆ ಓಗೊಟ್ಟು ಭಾಗವಹಿಸಿರುವುದು ಸದಾ ಮರೆಯಲಾಗದ ಐತಿಹಾಸಿಕ ಘಟನೆ ಎಂದು ಸಚಿವರು ಸ್ಮರಿಸದರು.
ಎಲ್ಲಾ ಮಾಸಿಕ ಪಿಂಚಣಿ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವುದರೊಂದಿಗೆ ಪ್ರತಿ ಮಾಹೆ ರಾಜ್ಯದಲ್ಲಿ ಅಂದಾಜು 82.57 ಲಕ್ಷ ಫಲಾನುಭವಿಗಳಿಗೆ ಆಧಾರ್ ಆಧಾರಿತ ಪಿಂಚಣಿ ವ್ಯವಸ್ಥೆ ಯೋಜನೆಯಡಿ ನೇರವಾಗಿ ಜಮೆ ಮಾಡಲಾಗುತ್ತಿದೆ. ನೈಸರ್ಗಿಕ ವಿಕೋಪಗಳಿಂದ ತತ್ತರಿಸಿದ ರೈತರಿಗೆ ಕ್ಷಿಪ್ರ, ಪಾರದರ್ಶಕ ಹಾಗೂ ನಿಖರವಾದ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪರಿಹಾರ ತಂತ್ರಾಂಶವನ್ನು ಉನ್ನತೀಕರಿಸಿ, ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.
ಕರ್ನಾಟಕ ಭೂದಾಖಲೆಗಳು ದಶಕಗಳಿಂದ ಕಗ್ಗಂಟಿನಲ್ಲಿದ್ದು, ಜನರು ತಾಲೂಕು ಕಚೇರಿಗೆ ಅಲೆಯಬೇಕಿತ್ತು. ಇದಕ್ಕೆ ಪರಿಹಾರವಾಗಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರೊಂದಿಗೆ ಸುರಕ್ಷಿತಗೊಳಿಸಲಾಗುತ್ತಿದೆ.
ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮುಂದುವರೆಸಿಕೊಂಡು ಹೋಗುತ್ತಿರುವ ನಮ್ಮ ಸರ್ಕಾರದ ಕಾರ್ಯವೈಖರಿಗೆ ದೇಶ-ವಿದೇಶಗಳ ತಜ್ಞರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ 870.83 ಕೋಟಿಯಷ್ಟು ಹಣ ಸಂದಾಯ ಮಾಡಲಾಗಿದೆ. ಅಕ್ಕ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವುದರೊಂದಿಗೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿಸಲಾಗುತ್ತಿದೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 151 ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಆಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 192.52 ಹೆಕ್ಟೇರ್ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.
ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪರಿಶೀಲನಾ ಹಂತದಲ್ಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ 4 ಇಂದಿರಾ ಕ್ಯಾಂಟೀನ್ ಗಳು ಬಡವರ ಹಸಿವನ್ನು ನೀಗಿಸುತ್ತಿದ್ದು, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಕಾಪು ಪುರಸಭಾ ವ್ಯಾಪ್ತಿಯಲ್ಲಿ 2 ಹೊಸದಾಗಿ ಇಂದಿರಾ ಕ್ಯಾಂಟೀನ್ಳಿಗೆ ಕಳೆದ ಜೂನ್ ಮಾಹೆಯಲ್ಲಿ ಚಾಲನೆ ನೀಡಿದ್ದೇನೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬಹುಮುಖ್ಯ ಕ್ಷೇತ್ರವನ್ನಾಗಿ ರೂಪಿಸಲು ವಿಶೇಷ ಮುತುವರ್ಜಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಶಿವಪುರ, ಕೆರೆಬೆಟ್ಟು, ನಿಟ್ಟೆ, ಉಪ್ಪೂರು, ಸಾಂತೂರು ಹಾಗೂ ಎಲ್ಲೂರು ಗ್ರಾಮಗಳಲ್ಲಿ ಒಟ್ಟು 1207.34 ಎಕ್ರೆ ಜಮೀನನ್ನು ಗುರುತಿಸಲಾಗಿದ್ದು, ಇವು ಪ್ರಗತಿಯ ಹಂತದಲ್ಲಿವೆ ಎಂದರು.