ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 591 ಯೋಜನೆಗಳಿಗೆ 84,231 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದ್ದು, 1,56,989 ಉದ್ಯೋಗವಕಾಶ ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, 2023-24ನೇ ಸಾಲಿನಲ್ಲಿ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 84,231 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದ್ದು, 1,56,989 ಉದ್ಯೋಗವಕಾಶ ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ 30 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಸೀಮಿತವಾಗಿ ನೀಲಗಿರಿ ಬೆಳೆಯುವುದಕ್ಕೆ ಅನುವು ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮೈಸೂರು ಕಾಗದ ಕಾರ್ಖಾನೆಗೆ 20005.42 ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿಯನ್ನು 2060ರ ಆ.10ರವರೆಗೆ ನವೀಕರಿಸಿ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.