ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆಯ ದಿನ ಬಹಳ ಪ್ರಮುಖವಾಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಯಲಿದೆ. ಹಾಗಾಗಿ ಇಡಿ ರಾಜ್ಯದ ಜನತೆ ಹೈಕೋರ್ಟ್ ಏನು ತೀರ್ಪು ನೀಡಲಿದೆ ಎಂದು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಬೆಳಗ್ಗೆ 12 ಗಂಟೆಗೆ ವಿಚಾರಣೆ ಆರಂಭವಾಗಲಿದೆ. ಈಗಾಗಲೇ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ.
ಕಳೆದ ಸೆಪ್ಟೆಂಬರ್ 9 ರಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾ.ಎಂ. ನಾಗಪ್ರಸನ್ನ ಸೆ. 12ಕ್ಕೆ ವಿಚಾರಣೆ ಮುಂದೂಡಿ ಅದೇಶಿಸಿದ್ದರು.ಇದೀಗ ಕೊನೆಯ ವಾದವಾಗಿ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಪ್ರೊ.ರವಿವರ್ಮಕುಮಾರ್ ಅವರು ವಾದ ಮಂಡಿಸಬೇಕಾಗಿದೆ. ಅರ್ಜಿದಾರರು ಮತ್ತು ಪ್ರತಿವಾದಿಗಳ ಪರವಾಗಿ ಗುರುವಾರ ವಾದ ಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಈ ವಾರವೇ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ.