ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.7 ರ ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ3(ಎ) ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ135(ಬಿ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಇದಕ್ಕೆ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಅವರು ತಿಳಿಸಲಾಗಿದೆ.
ಈ ಜಿಲ್ಲೆಗಳಲ್ಲಿ ರಜೆ ಘೋಷಣೆ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.