ಅಂಕಾರಾ (ಟರ್ಕಿ):ಟರ್ಕಿಯಲ್ಲಿ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸರಣಿ ಗುಂಡಿನ ದಾಳಿಗಳು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ಕೇವಲ 24 ಗಂಟೆಗಳ ಅಂತರದಲ್ಲಿ ನಡೆದ ಎರಡನೇ ಶಾಲಾ ಶೂಟೌಟ್‌ನಲ್ಲಿ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯ ನಂತರ ಶಂಕಿತ ಆರೋಪಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಶಾಲೆಯ ಆವರಣಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಮನಬಂದಂತೆ ಗುಂಡಿನ ಮಳೆಗರೆದಿದ್ದಾನೆ. ಈ ಹಠಾತ್ ದಾಳಿಯಿಂದಾಗಿ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ದಾಳಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಾಳುಗಳು: ಕನಿಷ್ಠ 20 ಜನರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ದಾಳಿಯ ನಂತರ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸುತ್ತಿದ್ದಂತೆ, ಆರೋಪಿ ತನ್ನ ಬಳಿಯಿದ್ದ ಶಸ್ತ್ರಾಸ್ತ್ರದಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಮೃತಪಟ್ಟಿದ್ದಾನೆ.








