ಶಿವಮೊಗ್ಗ: ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು.
ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕøತ ಮಹಾಯೋಜನೆ(ಸಿಡಿಪಿ) ಕಾರ್ಯ ಪ್ರಗತಿಯಲ್ಲಿದೆ. ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ ಒಟ್ಟು 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು.
ಸೋಮಿನಕೊಪ್ಪದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 01 ಎಕರೆ 09 ಗುಂಟೆ ಪ್ರದೇಶದಲ್ಲಿ ವಸತಿ ಸಮುಚ್ಚಯ(ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 04 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು.
2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನವನ ಅಭಿವೃದ್ದಿ, ನಗರದ ಸರ್ಕಲ್ ಅಭಿವೃದ್ದಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಅಂದಾಜು ರೂ.25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸಲಾಗುತ್ತಿದೆ.
ಪ್ರಾಧಿಕಾರದ ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು ಅಂದಾಜು ರೂ.35 ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು.
ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯೀಕರಣ ಮತ್ತು ಅಭಿವೃದ್ದಿ ಮಾಡಲಾಗುವುದು. ಹಾಗೂ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ ಸಾರ್ವಜನಿಕರಿಗೆ/ನಿವೇಶನ ರಹಿತರಿಗೆ/ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು.
ಖಾಸಗಿ ಲೇಔಟ್‍ಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ(ಸಿಎ) ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಹಾಗೂ ಪ್ರಾಧಿಕಾರದಿಂದ ಈಗಾಗಲೇ ಮೂಲೆ/ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಹಾಜರಿದ್ದರು.
ಮಹಾ ಶಿವರಾತ್ರಿ 2024: ದಿನಾಂಕ, ಇತಿಹಾಸ, ಮಹತ್ವ, ಪೂಜಾ ಸಮಯ, ಇತರ ಮಹತ್ವದ ಮಾಹಿತಿ ಇಲ್ಲಿದೆ!