ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಸುರಿದ ಭಾರಿ ಗುಡುಗು ಸಹಿತ ಮಳೆ ಭೀಕರ ಅವಾಂತರಗಳನ್ನೇ ಸೃಷ್ಟಿಸಿದೆ. ಪ್ರಕೃತಿಯ ವಿಕೋಪಕ್ಕೆ ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಟ್ಟು ಆರು ಮಂದಿ ಬಲಿಯಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಮಳೆ-ಗಾಳಿಯ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಮಕ್ಕಳಾದ ಕಾಳಮ್ಮ (13) ಮತ್ತು ಕೀರ್ತಿ (9) ಎಂದು ಗುರುತಿಸಲಾಗಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯಲ್ಲಿ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಜರೇಕಟ್ಟೆ ಗ್ರಾಮದಲ್ಲಿ ಮಳೆ ಸುರಿಯುತ್ತಿದ್ದ ವೇಳೆ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಅಜಿತ್ (19) ಎಂಬ ಯುವಕನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.








