ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಹಾವೇರಿ ಜಿಲ್ಲೆಯಲ್ಲಿ ಒಬ್ಬರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ (53) ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಮಿನಕಟ್ಟೆಯ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಎಂಬುವರು ಹೊನ್ನಾಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಅವರು ಐಐಎಫ್‌ಎಲ್ , ಫೈವ್ ಸ್ಟಾರ್‌ಮೈಕ್ರೋ ಫೈನಾನ್ಗಳಲ್ಲಿ ಮನೆ ಕಟ್ಟಲು, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ರು. ಸಾಲ ಪಡೆದಿದ್ದರು. ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲ ಮಾಡಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಭಾನುವಾರ ಸಮೀಪದ ಹುಲ್ಲಹಳ್ಳಿಗೆ ತೆರಳಿ ತಮ್ಮ ಜಮೀನಿನಲ್ಲಿ ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಮಲ್ಕುಂಡಿಯ ಕೃಷ್ಣ ಮೂರ್ತಿ 4 ಖಾಸಗಿ ಫೈನಾನ್ಸ್ ಗಳಲ್ಲಿ 4 ಲಕ್ಷ ರು.ಸಾಲ ಮಾಡಿದ್ದು, ವಾರಕ್ಕೊಮ್ಮೆ ಹಣ ಕಟ್ಟುತ್ತಿದ್ದರು. ಸೋಮವಾರ ಬೆಳಗ್ಗೆ ಕಂತು ಕಟ್ಟಬೇಕಾಗಿತ್ತು. ಹಣವಿಲ್ಲದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.