ಬೆಂಗಳೂರು : ಕೆಎಸ್ಆರ್ಟಿಸಿಯು ಹೊಸ ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು. ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.
ಅಶ್ವಮೇಧ ಕ್ಲಾಸಿಕ್ ಬಸ್ ವಿಶೇಷತೆಗಳೇನು?
ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.
ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.
ಸ್ಲೀಪರ್, ಐರಾವತ ಕ್ಲಬ್ ಕ್ಲಾಸ್, ಅಂಬಾರಿಯಂಥ ವಿಶೇಷ ಬಸ್ಗಳನ್ನು ಹೊರತುಪಡಿಸಿ ಇತರ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.