ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಇದಕ್ಕೂ ಮುನ್ನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀರು ಹರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕೋರಬೇಕೆಂದು ಮನವಿ ಮಾಡಿದ್ದರು.
ಭೀಮಾ ನದಿ ತಟದ ಜನರು ನೀರಿಗಾಗಿ ತೊಂದರೆ ಎದುರಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ನೀರಿನ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಮುಖ್ಯಮಂತ್ರಿಗಳು ಮಾರ್ಚ್ 7 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ. ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ. ಈ ನಿಟ್ಟಿನಲ್ಲಿ ಕಲಬುರಗಿ ಆರ್ ಸಿ ಅವರು ಬೆಳಗಾವಿ ಆರ್ ಸಿ ಅವರಿಗೆ ಪತ್ರ ಬರೆದಿದ್ದಾರೆ ಎಂದೂ ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ ಪಿ.ಡಿ. ಖಾತೆಯಲ್ಲಿ ರೂ 16 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ ರೂ 127 ಕೋಟಿ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್
ಶಿವಮೊಗ್ಗ: ಸಾಗರದ ‘ಚೂರಿಕಟ್ಟೆ’ ಬಳಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ