ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ, ಮೇ 20ರಂದು ತುಮಕೂರಿನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಲಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಸುಮಾರು 2 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮವನ್ನು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದ್ದು, ಈ ಕುರಿತು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.ವಿವಿಧ ಜಿಲ್ಲೆಗಳಿಂದ ಆಗಮಿಸುವ ಫಲಾನುಭವಿಗಳ ಅನುಕೂಲಕ್ಕಾಗಿ ಸುಮಾರು 4000 ಬಸ್ಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಸರ್ಕಾರದ ವಿವಿಧ ಇಲಾಖೆಗಳ ಸಾಧನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗುವುದು. ಅಲ್ಲದೆ, ಸ್ಥಳದಲ್ಲೇ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯೂ ನಡೆಯಲಿದೆ.
ವಿವಿಧ ಇಲಾಖೆಗಳ ಪ್ರಗತಿ ಪಟ್ಟಿ, ಶಂಕುಸ್ಥಾಪನೆ ಅಥವಾ ಉದ್ಘಾಟನೆಗೊಳ್ಳಬೇಕಾದ ಕಾಮಗಾರಿಗಳ ಮಾಹಿತಿ ಹಾಗೂ ಶಿಲಾನ್ಯಾಸ ಫಲಕಗಳ ವಿವರಗಳನ್ನು ತಕ್ಷಣವೇ ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಮಾವೇಶಕ್ಕೆ ಬರುವ ಜನರಿಗೆ ಆಸನ, ಊಟ, ಸಾರಿಗೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತದ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚುವಂತೆ ತಿಳಿಸಲಾಗಿದೆ.








