ಮಂಡ್ಯ : ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಬೆಳ್ಳಿ ಹಬ್ಬ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಡಿ. 20 ರಂದು ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಗುರುವಾರ ಹೇಳಿದರು.
ಕೈಗಾರಿಕಾ ತರಭೇತಿ ಸಂಸ್ಥೆ ಮತ್ತು ಉದ್ಯೋಗ ಇಲಾಖೆ, ತರಭೇತಿ ಸಂಸ್ಥೆ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆಯುವ ಬೆಳ್ಳಿ ಹಬ್ಬ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಅಧ್ಯಕ್ಷತೆ ವಹಿಸಲಿದ್ದು, ಇಲಾಖೆಯ ಆಯುಕ್ತರಾದ ಡಾ.ರಾಗಾ ಪ್ರಿಯ ಅವರು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.
2002 ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೈಗಾರಿಕಾ ತರಭೇತಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿತು. ಈಗ ಸಂಸ್ಥೆಗೆ 25 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ 5 ಮಂದಿಗೆ ಸನ್ಮಾನಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ಹೊರ ತಂದಿರುವ ಸ್ಮರಣ ಸಂಚಿಕೆಯನ್ನು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಆನಂದ ಅವರು ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ರಕ್ತದಾನ ಶಿಬಿರವನ್ನು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೈಗಾರಿಕಾ ತರಭೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕ ಎನ್.ಎಸ್.ಚಿದಾನಂದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕಾರ್ಯಕ್ರಮದಲ್ಲಿ ಜಂಟಿ ನಿರ್ದೇಶಕಿ ಎಸ್.ಮಂಜುಳಾ ಬಹುಮಾನ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಂ.ಸಿ.ಬಸವರಾಜು ಪ್ರಧಾನ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದಿಂದ ತೈಲೂರು ವೆಂಕಟಕೃಷ್ಣ, ಶಿಕ್ಷಣ ಕ್ಷೇತ್ರದಿಂದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೆ.ಜೆ.ಶಿವಲಿಂಗಯ್ಯ, ಕೃಷಿ ಕ್ಷೇತ್ರದಿಂದ ಸಾವಯವ ಕೃಷಿಕ ಜಿ.ಎಂ.ಸಿದ್ದರಾಜು, ಕಲೆ ಕ್ಷೇತ್ರದಿಂದ ಜಾಗೃತಿ ಬರಹಗಾರ ತೂಬಿನಕೆರೆ ಗೋವಿಂದ್, ಹಾಗೂ ಕ್ರೀಡಾ ಕ್ಷೇತ್ರದಿಂದ ವಾಲಿಬಾಲ್ ಆಟಗಾರ್ತಿ ಎಂ.ಎಸ್. ಸಂಜನಾ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವನಂದಾಮೂರ್ತಿ, ಜಂಟಿ ನಿರ್ದೇಶಕ ಕೆ.ಆರ್.ಹಾಲಪ್ಪ ಶೆಟ್ಟಿ, ವಿಭಾಗೀಯ ಉಪ ನಿರ್ದೇಶಕ ಕೆ.ಸಿ.ರವಿಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೊಷ್ಠಿಯಲ್ಲಿ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಪ್ರತಾಪ್ ಚಂದ್ರ, ಉಪಾಧ್ಯಕ್ಷ ಸೋಮರಾಜು, ಕ್ರೀಡಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿ ಸದಸ್ಯರಾದ ಶೇಖರ್, ಜಯವಾಣಿ, ಆಶಾಲತಾ ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ








