BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language



State

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಚೆನ್ನೈ : ಆಗಸ್ಟ್ 5ರಿಂದ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲವಾಗಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರ್ತಿಸಿಕೊಂಡಿದ್ದಂತ ಮೇರು ಗಾಯಕ. ಇಂತಹ ಗಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ. ಆದ್ರೇ ಅವರ ಸಾಧನೆ, ಹಾಡಿದ ಹಾಡುಗಳ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಇಂತಹ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಜೀವನ ಚೈತ್ರದ ಬಗ್ಗೆ ಮುಂದೆ ಓದಿ..

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಜೀವನ ಜೈತ್ರ

ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರು ಹುಟ್ಟಿದ ದಿನ ಜೂನ್ 4, 1946. ಅವರು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.

1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ‘ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ‘ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.

ಎಸ್ ಪಿ ಬಿ ಮಹತ್ಸಾಧನೆ

ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರು. ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿಮುದ್ರಿಸಿದ್ದರು.

ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ.

ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿ ಬಿ ಎಸ್ ಬಗ್ಗೆ ಹೇಳುತ್ತಾ ‘ಪಿ ಬಿ ಎಸ್ ನನ್ನ ಆತ್ಮ, ನಾನು ಶರೀರ’ ಎನ್ನುತ್ತಿದ್ದರು. ರಾಜ್ ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.

ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ಆರ್, ಶಿವಾಜಿ ಗಣೇಶನ್, ಎನ್ ಟಿ ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.

ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದು 40 ಸಾವಿರಕ್ಕೂ ಹೆಚ್ಚು ಹಾಡುಗಳು

ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು.

ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ 40,000ಕ್ಕೂ ಹೆಚ್ಚು.

ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು ಗೀತೆಗಳನ್ನು ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಕಂಠದಾನ ಕಲಾವಿದರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು.

ಪ್ರಶಸ್ತಿ ಗೌರವ ಮತ್ತು ಪುರಸ್ಕಾರಗಳು

  1. ವಿವಿಧ ಭಾಷೆಗಳ ಪರಿಧಿಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳು
  2. ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು
  3. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು
  4. 25 ಬಾರಿ ಆಂಧ್ರಪ್ರದೇಶ ಸರ್ಕಾರದ ‘ನಂದಿ’ ಪ್ರಶಸ್ತಿ.
  5. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ.
  6. ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್

ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸುತ್ತಿದ್ದಾರೆ. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ. ಈ ಎಲ್ಲ ನಿಟ್ಟಿನಲ್ಲಿ ಬಾಲು ಒಬ್ಬ ನೈಜ ಸಾಂಸ್ಕೃತಿಕ ರಾಯಭಾರಿ.

ಹೀಗೆ ಅಮೋಘ ಸಾಧನೆ ಗೈತ ಮೇರು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ, ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ನಮ್ಮನ್ನು ಅಗಲಿದ್ದು, ತುಂಬಲಾರದ ನಷ್ಟವೇ ಸರಿ.







error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ