ಬೆಳಗಾವಿ : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಈವರೆಗೆ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಈವರೆಗೆ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದ್ದು, ಇದುವರೆಗೆ 43 ಜನ ಮೃತಪಟ್ಟಿದ್ದಾರೆ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಕ್ಷಣವೇ ಸರ್ವೇ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಜೊತೆಗೆ ಅನೇಕ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ 64 ಕಾಳಜಿ ಕೇಂದ್ರ ಆರಂಭಿಸಿದ್ದು, 10,000ಕ್ಕೂ ಅಧಿಕ ಸಂತ್ರಸ್ತರು ಆಶ್ರಯ ಪಡೆದುಕೊಂಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 800ಕ್ಕೂ ಅಧಿಕ ಮನೆಗಳು ಸಂಪೂರ್ಣ ಹಾನಿಯಾಗಿದ್ದು, 4000 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.