ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಇವಿಎಂನ ಎಲ್ಲ ಮತಗಳನ್ನು ವಿವಿಪ್ಯಾಟ್ ಸ್ಲಿಪ್ ಮೂಲಕ ಎಣಿಕೆ ಮಾಡಬೇಕು ಎಂಬ ಬೇಡಿಕೆ ಮತ್ತೊಮ್ಮೆ ಕೇಳಿಬಂದಿದೆ. ಈ ವಿಷಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 16 ಕ್ಕೆ ನಿಗದಿಪಡಿಸಲಾಗಿದೆ.
ಮಾರ್ಚ್ 2023 ರಲ್ಲಿ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 100% ಇವಿಎಂ ಮತಗಳು ಮತ್ತು ವಿವಿಪ್ಯಾಟ್ ಸ್ಲಿಪ್ಗಳನ್ನು ಹೊಂದಿಸಲು ಕೋರಿ ಅರ್ಜಿ ಸಲ್ಲಿಸಿತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.
ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಕೂಡ ಇದೇ ರೀತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ ಈಗ ಏಪ್ರಿಲ್ 16 ರಂದು ಈ ಎರಡೂ ಅರ್ಜಿಗಳನ್ನು ನ್ಯಾಯಮೂರ್ತಿ ಖನ್ನಾ ಮತ್ತು ನ್ಯಾಯಮೂರ್ತಿ ದತ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಇವಿಎಂ ಮತಗಳು ಮತ್ತು ವಿವಿಪ್ಯಾಟ್ ಸ್ಲಿಪ್ಗಳನ್ನು ಕ್ರಾಸ್ ಚೆಕ್ ಮಾಡಬೇಕು ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ತಿಳಿಸಿದೆ. ಈ ಪ್ರಕ್ರಿಯೆಯನ್ನು ವೇಗವಾಗಿ ಮಾಡಲು ವಿವಿಪ್ಯಾಟ್ ನಲ್ಲಿ ಬಾರ್ ಕೋಡ್ ಗಳನ್ನು ಬಳಸಬಹುದು ಎಂದು ಎಡಿಆರ್ ಸೂಚಿಸಿದೆ.