ಮಂಡ್ಯ : ಮದ್ದೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಿಂಷಾ ನದಿ ಪಾತ್ರದಲ್ಲಿ ದಿನನಿತ್ಯ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವುದಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.
ಮದ್ದೂರು ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಧಿಕಾರಿಗಳೇ ಮರಳು ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಸನ್ ಜಾರಿಯಲ್ಲಿದ್ದರೂ ಸಹ ಕೆಲವರು ನಿರಂತರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ಯಾವುದೇ ಮುಲಾಜಿಗೆ ಒಳಗಾಗದೆ ಪ್ರಕರಣ ದಾಖಲು ಮಾಡಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದರು.
ಅಕ್ರಮ ಮರಳುಗಾರಿಕೆ ತಡೆಯುವ ಸಂಬಂಧ ಈಗಾಗಲೇ ಕಾರ್ಯತಂತ್ರ ರೂಪಿಸಿದ್ದು, ಮರಳು ಅಡ್ಡೆಯ ಮೇಲೆ ಧಿಡೀರ್ ದಾಳಿ ಮಾಡಿ ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು, ರೈತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಿಗರ ಕಚೇರಿಯನ್ನು ತೆರೆಯಲು ಕ್ರಮ ವಹಿಸಲಾಗಿದೆ. ಸರ್ಕಾರದ ಯೋಜನೆಗಳು ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಸರ್ಕಾರದ ಹಲವು ಯೋಜನೆಗಳನ್ನು ಜಾರಿಗಳಿಸುವ ಜತೆಗೆ ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಇ-ಪೌತಿ ಖಾತೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.
ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಗ್ರಾಮ ಲೆಕ್ಕಿಗರು, ಕಂದಾಯ ರಾಜಸ್ವ ನಿರೀಕ್ಷಕರು ಪರಿಶೀಲನೆ ನಡೆಸಿ ಬಳಿಕ ತಹಶೀಲ್ದಾರ್ ರವರ ಅದೇಶದಂತೆ 15 ದಿನಗಳಲ್ಲಿ ಖಾತೆ ಮಾಡಿಕೊಡುವುದಾಗಿ ಹೇಳಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸಕಾಲದಲ್ಲಿ ರೈತರಿಗೆ ದೊರಕಬೇಕೆಂಬ ಉದ್ದೇಶದೊಂದಿಗೆ ರೆಕಾರ್ಡ್ ಗಳನ್ನು ಡಿಜಿಟಲೀಕರಣ ಕೈಗೊಂಡು ಶೇ. 75ರಷ್ಟು ಪ್ರಗತಿ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ. ರೈತರು, ಸಾರ್ವಜನಿಕರು ತಾಲೂಕು ಕಚೇರಿಗೆ ಆಗಮಿಸಿದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲೇ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯಬಹುದೆಂದರು.
ಕರ್ತವ್ಯ ನಿರತ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ತೆರಳಿ ರೈತರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಮಾಹಿತಿಗಳನ್ನು ಸ್ಥಳದಲ್ಲೇ ಒದಗಿಸಬೇಕೆಂದು ಈಗಾಗಲೇ ಸೂಚನೆ ನೀಡಿದ್ದು ಇದರಿಂದಾಗಿ ದೂರದ ಗ್ರಾಮಗಳಿಂದ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಿದಂತಿಗುತ್ತದೆ ಎಂದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು
ಬೆಂಗಳೂರು ಏರ್ಪೋರ್ಟ್ ಮೆಟ್ರೋ ಮಾರ್ಗದ ಪ್ರಗತಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪರಿಶೀಲನೆ