ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ.
ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮಂಡ್ಯ ಸಂಸದರು ಆಗಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.
ಶ್ರೀರಂಗಪಟ್ಟಣ – ಕೆ.ಆರ್.ಪೇಟೆ – ಪಾಂಡವಪುರ – ಚನ್ನರಾಯಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಈ ರಸ್ತೆಯು ತಾಲೂಕು ಕೇಂದ್ರಗಳಿಂದ ನಗರಗಳಿಗೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದ್ದು, ಆರ್ಥಿಕವಾಗಿ ದೊಡ್ಡ ಕೊಡುಗೆಯನ್ನು ನೀಡಲಿದೆ. ಮುಖ್ಯವಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಕೇಂದ್ರ ಸಚಿವರು ನಿತಿನ್ ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಅಲ್ಲದೆ; ಕೃಷಿ ಉತ್ಪನ್ನಗಳಾದ ಹಾಲು, ತರಕಾರಿ ಮುಂತಾದವುಗಳನ್ನು ಗ್ರಾಮೀಣ ಪ್ರದೇಶಗಳಿಂದ ಮೈಸೂರು, ಬೆಂಗಳೂರು, ಹಾಸನ ಮತ್ತಿತರೆ ನಗರಗಳಿಗೆ ಪೂರೈಸಲು ಅನುಕೂಲವಾಗಲಿದೆ. ಜತೆಗೆ, ಶ್ರೀರಂಗಪಟ್ಟಣ, ಜಗದ್ವಿಖ್ಯಾತ ಪಕ್ಷಿಧಾಮ ರಂಗನತಿಟ್ಟು ಸೇರಿದಂತೆ ಹಲವಾರು ಪ್ರವಾಸಿ ತಾಣಗಳನ್ನು ತಲುಪಲು ಜನತೆಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಕುಮಾರಸ್ವಾಮಿ ಅವರು ಸಾರಿಗೆ ಸಚಿವರ ಗಮನಕ್ಕೆ ತಂದರು.
ಶಾಸಕ ಹೆಚ್.ಟಿ.ಮಂಜುನಾಥ್ ಸಂತಸ:
ಯೋಜನೆಗೆ ಒಪ್ಪಿಗೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾಗೂ ಈ ಬಗ್ಗೆ ಮುತುವರ್ಜಿ ವಹಿಸಿ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡಿದರೆ ಮೈಸೂರು, ಮಂಡ್ಯ, ಹಾಸನ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ