ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-3 ಆಗಸ್ಟ್.2 ರ ಇಂದಿನಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ:02-08-2024 ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿರುತ್ತಾರೆ ಎಂದು ತಿಳಿಸಿದೆ.
ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿರುತ್ತಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.
ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.
ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ