ಬೆಂಗಳೂರು : ಇದೇ ತಿಂಗಳ 27ರಂದು ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ನಿಗದಿಯಾಗಿದ್ದು, ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕಾರಿಣಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪರವಾಗಿ ಅವರ ಆಪ್ತರಾಗಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸುತ್ತಿರುವುದು ಕುತೂಹಲದ ಸಂಗತಿ.
ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡ ಕೆಲನಾಯಕರು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ರಾಜ್ಯ ಘಟಕದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದರು. ಇದನ್ನು ಆಲಿಸಿದ್ದ ಅಮಿತ್ ಶಾ ಅವರು ತಿಂಗಳಾಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸುವುದಾಗಿ ಭರವಸೆ ನೀಡಿದ್ದರು.
ಇದೀಗ ಅಮಿತ್ ಶಾ ಅವರು ಮ್ಮ ಭರವಸೆಗೆ ಪೂರಕವಾಗಿ ಆಪ್ತರಾಗಿರುವ ಭೂಪೇಂದ್ರ ಯಾದವ್ ಅವರನ್ನು ರಾಜ್ಯ ಕಾರ್ಯಕಾರಿಣಿ ಸಭೆಗೆ ಕಳುಹಿಸುತ್ತಿದ್ದಾರೆ. ಯಾದವ್ ಅವರು ಈ ಭೇಟಿ ವೇಳೆ ರಾಜ್ಯ ಘಟಕದ ಹಲವು ನಾಯಕರೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ. ಜತೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳಲು ಎದುರಾಗಿರುವ ಸವಾ ಸವಾಲುಗಳನ್ನು ಗುರುತಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.