ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದಂತ ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ( Singer Shivamogga Subbanna ) ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ( Police Honours ) ನೆರವೇರಿಸುವಂತ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ಖ್ಯಾತ ಗಾಯಕರಾದಂತ ಶಿವಮೊಗ್ಗ ಸುಬ್ಬಣ್ಣ ಅವರು ದಿನಾಂಕ 11-08-2022ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸುವಂತೆ ಆದೇಶಿಸಿದ್ದಾರೆ.