ನವದೆಹಲಿ: 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 11,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಕರ್ನಾಟಕವು ಕೇಂದ್ರವನ್ನು ಕೋರಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರೆದಿದ್ದ ರಾಜ್ಯ ಹಣಕಾಸು ಸಚಿವರ ಬಜೆಟ್ ಪೂರ್ವ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ದೀರ್ಘಕಾಲದಿಂದ ಬಾಕಿ ಇರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರದಿಂದ ರಾಜ್ಯಕ್ಕೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರನ್ನು ಕೋರಲಾಗಿದೆ ಎಂದು ಹೇಳಿದರು.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರಾಜ್ಯವು ಕೇಂದ್ರವನ್ನು ಕೋರಿದೆ ಎಂದು ಅವರು ಹೇಳಿದರು.

ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಬಿಸಿಯೂಟ ನೌಕರರ ಗೌರವಧನವನ್ನು ಹೆಚ್ಚಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ಅವರು, ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶಗಳಲ್ಲಿ ಪ್ರಸ್ತುತ ಇರುವ 1.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಗ್ರಾಮೀಣ ಪ್ರದೇಶದಲ್ಲಿ 2 ಲಕ್ಷದಿಂದ 3 ಲಕ್ಷ ರೂ.ಹೆಚ್ಚಿಸುವಂತೆ ಒತ್ತಾಯಿಸಿದರು

ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡುವಂತೆ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು

Share.
Exit mobile version