ಬೆಂಗಳೂರು :ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ₹4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ, ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ ₹45ಸಾವಿರ ಕೋಟಿ ಹಾಗೂ ಅನುದಾನದ ರೂಪದಲ್ಲಿ ₹15 ಸಾವಿರ ಕೋಟಿ ದೊರಕುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಆಯೋಗದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದು,
ಸಭೆಯಲ್ಲಿ ಈ ಕೆಳಗಿನ ಪ್ರಮುಖ ವಿಷಯಗಳ ಕುರಿತು ಆಯೋಗದ ಸದಸ್ಯರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಭಾರತದ ಅಭಿವೃದ್ಧಿ ಕಥನದಲ್ಲಿ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5ರಷ್ಟಿದ್ದರೂ, ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ. ಇಡೀ ದೇಶದಲ್ಲೇ ಜಿಡಿಪಿ ದೇಣಿಗೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ.
ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ₹4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ, ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ ₹45ಸಾವಿರ ಕೋಟಿ ಹಾಗೂ ಅನುದಾನದ ರೂಪದಲ್ಲಿ ₹15 ಸಾವಿರ ಕೋಟಿ ದೊರಕುತ್ತಿದೆ. ಅಂದರೆ ಕರ್ನಾಟಕ ನೀಡುವ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ
15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26 ರ 5 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ₹68,275 ಕೋಟಿ ನಷ್ಟ ಉಂಟಾಗಿದೆ.
ಆರ್ಥಿಕವಾಗಿ ಬಲಿಷ್ಠವಾಗಿರುವ ರಾಜ್ಯಗಳು ಇತರ ಬಡ ರಾಜ್ಯಗಳಿಗೆ ನೆರವಾಗಲು ಬದ್ಧವಾಗಿವೆ. ಆದರೆ ಇದು ತಮ್ಮದೇ ನಾಡಿನ ಜನರನ್ನು ಅಥವಾ ಆರ್ಥಿಕ ದಕ್ಷತೆಯನ್ನು ಸಂಕಷ್ಟಕ್ಕೆ ಸಿಲುಕಿಸಬಾರದು. ರಾಜ್ಯಗಳು ಗಳಿಸುವ ಸಂಪನ್ಮೂಲದ ಒಂದು ದೊಡ್ಡ ಪಾಲು ಅವುಗಳ ನಡುವೆಯೇ ಹಂಚಿಕೆಯಾಗಬೇಕು.
ರಾಜ್ಯವು ಸಹ ಪ್ರಾದೇಶಿಕ ಅಸಮಾನತೆಯನ್ನು ಎದುರಿಸುತ್ತಿವೆ. ಉದಾಹರಣೆಗೆ ಕಲ್ಯಾಣ ಕರ್ನಾಟಕದ ಪ್ರದೇಶ. ಇದರೊಂದಿಗೆ ನಗರೀಕರಣದ ಸವಾಲುಗಳನ್ನು ಎದುರಿಸುತ್ತಿವೆ. ಈ ಕುರಿತು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗಿದೆ.
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ₹.55586 ಕೋಟಿ ರೂ. ಬಂಡವಾಳ ಅಗತ್ಯವಿದೆ. ಇದರಲ್ಲಿ ನಾವು ಕೇಂದ್ರದಿಂದ ನಾವು ₹27793 ಕೋಟಿ ಅನುದಾನ ಒದಗಿಸಲು ಮನವಿ ಮಾಡುತ್ತೇವೆ.
ಇದೇ ರೀತಿ ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ ಮಾಡಲು ರಾಜ್ಯ ₹25 ಸಾವಿರ ಕೋಟಿ ಹೂಡಿಕೆ ಮಾಡುತ್ತಿದ್ದು, ಇದಕ್ಕೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ 16ನೇ ಹಣಕಾಸು ಆಯೋಗ ₹25 ಸಾವಿರ ಕೋಟಿ ಹೊಂದಾಣಿಕೆ ಅನುದಾನ ಒದಗಿಸಲು ಮನವಿ ಮಾಡುತ್ತೇವೆ. ಈ ನಮ್ಮ ಮನವಿಗೆ 16ನೇ ಹಣಕಾಸು ಆಯೋಗದಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.