ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ನೌಕರರ ವೇತನ ಪರಿಷ್ಕರಣಿಯ 38 ತಿಂಗಳ ಹಿಂಬಾಕಿ ಪಾವತಿ ಸೇರಿ ಬೇಡಿಕೆಗಳ ಬಗ್ಗೆ ಮುಂದಿನ ಒಂದು ವಾರದೊಳಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದಾಗಿ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. 2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ, 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಇದುವರೆಗೂ ಬೇಡಿಕೆಗಳನ್ನು ಈಡೇರಿಸುವ ಕುರಿತು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ.