ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈಬಿಟ್ಟು ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದ್ದು,ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್ ಮೂಲಕ ಏಪ್ರಿಲ್ 30 ರಂದು ಬೆಳಗ್ಗೆ 11 ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ ಸೈಟ್ kea.kar.nic.in ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.








