ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳ ‘ಪಿ.ಎಂ ಪೋಷಣ್’ (ಬಿಸಿಯೂಟ) ಯೋಜನೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಸ್ಥಿತಿಯಿಂದಾಗಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ಸರಬರಾಜಿನಲ್ಲಿ ಏರುಪೇರಾಗುವ ಸಂಭವವಿದೆ ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ.
ಆದ್ಯತೆಯ ಮೇರೆಗೆ ಪೂರೈಕೆ: ಬಿಸಿಯೂಟ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದಕ್ಕೆ ನಿರಂತರ ಗ್ಯಾಸ್ ಪೂರೈಕೆ ಅಗತ್ಯವಾಗಿದೆ. ಹೀಗಾಗಿ, ಗ್ಯಾಸ್ ಪೂರೈಕೆಯನ್ನು ‘ಅಗತ್ಯ ವಸ್ತು ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಸಿಲಿಂಡರ್ ಒದಗಿಸಲು ಸೂಚಿಸಲಾಗಿದೆ.
ಗಡುವು: ಪ್ರಸಕ್ತ ಶೈಕ್ಷಣಿಕ ವರ್ಷವು ಏಪ್ರಿಲ್ 10, 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಅಲ್ಲಿಯವರೆಗೂ ಯಾವುದೇ ಅಡೆತಡೆಯಿಲ್ಲದೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಪೂರೈಸುವಂತೆ ಎಲ್ಲಾ ವಿತರಕರಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.









