ನವದೆಹಲಿ:ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಸಾವಿರಾರು ಪ್ರಕರಣಗಳ ತ್ವರಿತ ವಿಲೇವಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಈಗಿರುವ 33 ರಿಂದ 37ಕ್ಕೆ (ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ) ಹೆಚ್ಚಿಸುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
‘ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಲು ಸಂಪುಟವು ಹಸಿರು ನಿಶಾನೆ ತೋರಿಸಿದೆ. ಇದರೊಂದಿಗೆ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ (CJI ಸೇರಿ) 38ಕ್ಕೆ ಏರಿಕೆಯಾಗಲಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಸದ್ಯ 92,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳದಿಂದಾಗಿ ಹೆಚ್ಚಿನ ಪೀಠಗಳನ್ನು ರಚಿಸಲು ಸಾಧ್ಯವಾಗಲಿದ್ದು, ಜನರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಕೊನೆಯ ಬಾರಿಗೆ 2019 ರಲ್ಲಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು 30 ರಿಂದ 33ಕ್ಕೆ ಹೆಚ್ಚಿಸಲಾಗಿತ್ತು. ಇದೀಗ ಆರು ವರ್ಷಗಳ ನಂತರ ಮತ್ತೆ ಈ ಸಂಖ್ಯೆಯನ್ನು ಏರಿಸಲಾಗುತ್ತಿದೆ.








