ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ದಶಕಗಳ ಕಾಲದ ಕಮ್ಯುನಿಸ್ಟ್ ಮತ್ತು ತೃಣಮೂಲ ಕಾಂಗ್ರೆಸ್ ಆಡಳಿತದ ನಂತರ, ರಾಜ್ಯವು ತನ್ನ ಮೊದಲ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಮಂತ್ರಿಯನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ. ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕೋಲ್ಕತ್ತಾದ ರಾಜಭವನದಲ್ಲಿ ನಡೆಯಲಿರುವ ಈ ಭವ್ಯ ಸಮಾರಂಭಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ರಾಜ್ಯಪಾಲರು ಸುವೇಂದು ಅಧಿಕಾರಿ ಅವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಕೋಲ್ಕತ್ತಾಗೆ ಆಗಮಿಸಿದ್ದಾರೆ.ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಕೋಲ್ಕತ್ತಾದಾದ್ಯಂತ ಮತ್ತು ರಾಜಭವನದ ಸುತ್ತಮುತ್ತ ಅತಿ ಹೆಚ್ಚು ಭದ್ರತೆಯನ್ನು ನಿಯೋಜಿಸಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.








