ಮಂಡ್ಯ : ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿರುವ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ ಎಂದು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಪ್ರಶಂಸೆ ವ್ಯಕ್ತಪಡಿಸಿದರು.
ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಭಾರತದ ಸಂವಿಧಾನ ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ. ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ, ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನವನ್ನು ರೂಪಿಸುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದರೆ, ಅದಕ್ಕೆ ಕಾರಣ, ನಮ್ಮ ಸಶಕ್ತವಾದ ಸಂವಿಧಾನ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ನ. 26, 1949 ರಂದು ದೇಶಕ್ಕೆ ಕೊಡುಗೆಯಾಗಿ ನೀಡಿದ್ದು, ಆ ದಿನವನ್ನ ಸಂವಿಧಾನ ಸಮರ್ಪಣ ದಿನವನ್ನಾಗಿ ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪವಾಗಿದೆ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿಯ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆಂದರು.
ಇನ್ನು ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಕೆಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಖಂಡಿಸಿ ಗೈರು ಹಾಜರಿಯ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಕಾರ್ಯಕ್ರಮ ಕುರಿತು ದೇವಾಂಗ ಸಂಘ ಪ್ರಥಮ ದರ್ಜೆ ಕಾಲೇಜು ಮತ್ತು ಅಂಬೇಡ್ಕರ್ ವಾದಿ ಚಿಂತಕರಾದ ಡಾ. ಸುರೇಶ್ ಗೌತಮ್ ಅವರು ಪ್ರಧಾನ ಭಾಷಣ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಸ್ಥಾನದ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದ ವರೆಗೆ ಶಾಲಾ,ಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜಗಳು ಹಾಗೂ ಸಂವಿಧಾನ ಪುಸ್ತಕಗಳ ಪ್ರದರ್ಶನದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥದ ಮೂಲಕ ಅಂಬೇಡ್ಕರ್ ಭವನಕ್ಕೆ ಆಗಮಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಪಂ ಇಓ ರಾಮಲಿಂಗಯ್ಯ, ಬಿಇಓ ಧನಂಜಯ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ನಾಗರಾಜ್, ಸಿಡಿಪಿಓ ಅರುಣ್ ಕುಮಾರ್, ಡಿಎಸ್ಎಸ್ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ, ತಾ.ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಮಹದೇವಯ್ಯ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ
ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ








