ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುವುದು. ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಾಣ ಮಾಡಬೇಕು. ಚಿತ್ರನಗರಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‌ಗಳನ್ನೂ ನಿರ್ಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಭೂಮಿ ಗುರುತಿಸಬೇಕು. ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯಬೇಕು ಎಂದು ಹೇಳಿದ್ದಾರೆ.
ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು. ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಾಣ ಮಾಡಬೇಕು. ಚಿತ್ರನಗರಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‌ಗಳನ್ನೂ ನಿರ್ಮಿಸಬೇಕು. ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಬೇಕು.ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯುವಂತಾಗಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಒತ್ತು ನೀಡಬೇಕು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.