ಬೆಂಗಳೂರು: ರಾಜ್ಯದಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಅರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿರುವ ಅಧ್ಯಕ್ಷ/ ಉಪಾಧ್ಯಕ್ಷ ಮತ್ತು ಸದಸ್ಯರ ಮಾಸಿಕ ಗೌರವ ಧನವನ್ನು ಪರಿಷ್ಕರಿಸಲು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಂದ ಸ್ವೀಕರಿಸಲಾದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿ ಸಹಮತಿಯನ್ನು ಕೋರಲಾಗಿತ್ತು. ಆರ್ಥಿಕ ಇಲಾಖೆಯು 2023ರ ಮೇ 2 ರಂದು ನೀಡಿರುವ ಅಭಿಪ್ರಾಯದಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಿರುತ್ತದೆ. ಸದರಿ ಪ್ರಸ್ತಾವನೆಯನ್ನು ಮರು ಪರಿಶೀಲಿಸಿ 2ನೇ ಬಾರಿಗೆ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಿದಾಗಲೂ ಸಹ 2024ರ ಜನವರಿ 23ರಂದು ಮತ್ತೊಮ್ಮೆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ಇದರಿಂದ ಪ್ರಸ್ತುತ ಗೌರವಧನ ಪರಿಷ್ಕರಿಸಲು ಸಾಧ್ಯವಾಗಿರುವುದಿಲ್ಲ. ಆದರೆ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ಅಗತ್ಯ ಕ್ರಮ ವಹಿಸುವುದಾಗಿ ಸಚಿವರು ಭರವಸೆ ನೀಡಿದರು.