ವಿಧಾನಸಭೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನೇಮಕಾತಿ ಮಾಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಡಿ.ಜಿ.ಶಾಂತನಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ದೈನಂದಿನ ಚಟುವಟಿಕೆಗಳಿಗೆ ಆಡಚಣೆಯಾಗದಂತೆ ಹತ್ತಿರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಗೆ ಪ್ರಭಾರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಕ್ರಮವಹಿಸಲಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ರಾಜ್ಯಾದ್ಯಂತ ಅಭ್ಯರ್ಥಿಗಳಿಗೆ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಲಾಗಿರುತ್ತದೆ. ಈ ಕುರಿತಂತೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೂ ಕಾಲಕಾಲಕ್ಕೆ ನಿರ್ದೇಶನ ನೀಡಲಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸುವ ಬದಲಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.
ರಾಜ್ಯದ ‘ಪುನರ್ವಸತಿ ಕಾರ್ಯಕರ್ತೆ’ಯರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಇಲ್ಲ’ವೆಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ