ಕಲಬುರ್ಗಿ : ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸುಲಭವಾಗುತ್ತದೆ ಎಂದು ಸಿದ್ದರಾಮಯ್ಯ ಬಣದ ಹಲವು ಕಾಂಗ್ರೆಸ್ ನಾಯಕರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಡ ಹೇರುತ್ತಿದ್ದದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪಷ್ಟನೆ ನೀಡಿದ್ದು ಮೂರು ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ವಿಚಾರವಾಗಿ ನಾಳೆ (ಜ.10) ರಂದು ಸಭೆ ನಡೆಯಲಿದೆ. ಯಾರನ್ನು ಕಣಕ್ಕಿಳಿಸಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ಒಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಬುಧವಾರ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದು ತಿಳಿಸಿದರು.
ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಡಿಸಿಎಂ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಗಮನ ಕೊಡಬೇಕು. ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೆ ಇಂತಹದ್ದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.