ಮೈಸೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯ ಹೊರಬರುತ್ತದೆ, ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಈ ಪ್ರಕರಣದಲ್ಲಿ ಎನ್ಐಎ ತನಿಖೆಗೆ ವಹಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಮೈಸೂರಿನಲ್ಲಿ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಆಯೋಜಿಸಿದ್ದ ಪರಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಸದನದಲ್ಲಿ ಈಗಾಗಲೇ ಉತ್ತರ ನೀಡಿದ್ದೇನೆ. ಸತ್ಯ ಹೊರಬರಬೇಕು ಎಂದು ಎಸ್ಐಟಿ ರಚನೆ ಮಾಡಿದ್ದೇವೆ. ಈ ನಡುವೆ ಅನೇಕರು ಅನೇಕ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಹೇಳಿಕೆಗಳಿಂದ ಸತ್ಯ ಹೊರಬರುವುದಿಲ್ಲ, ಹೇಳಿಕೆ ನಿಲ್ಲಿಸಿ ತನಿಖೆ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಆವಾಗ ಸತ್ಯ ಹೊರಬರುತ್ತದೆ. ಇದರಲ್ಲಿ ರಾಜಕೀಯ ಮಾಡಬಾರದು. ಈ ಪ್ರಕರಣದಿಂದ ಸತ್ಯ ಹೊರಬರಬೇಕೆಂಬುದೇ ನಮ್ಮ ಉದ್ದೇಶ ಎಂದರು.