ಬೆಂಗಳೂರು : ಕರ್ನಾಟಕದಲ್ಲಿ ಮಕ್ಕಳ ಕಳ್ಳರ ವದಂತಿಗೆ ಯಾರೂ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಹಬ್ಬಿದೆ. ವದಂತಿಯಿಂದ ಭಯಗೊಂಡ ಜನರು ತಮ್ಮ ತಮ್ಮ ಊರಿನಲ್ಲಿ ಹೊಸ ವ್ಯಕ್ತಿಗಳನ್ನು ಯಾರೇ ಕಂಡರೂ ಅನುಮಾನದಿಂದ ನೋಡುತ್ತಿದ್ದಾರೆ. ಜತೆಗೆ ಅಮಾಯಕರ ಮೇಲೆ ಮಕ್ಕಳ ಕಳ್ಳರೆಂದು ಭಾವಿಸಿ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.
ದೇಶದ ಬೇರೆ ಬೇರೆ ಭಾಗದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನಿಮ್ಮ ಊರಿಗೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಇದರಿಂದ ಭಯಗೊಂಡ ಜನರು ಹೊಸ ವ್ಯಕ್ತಿಗಳು ಊರಿನಲ್ಲಿ ಯಾರೇ ಕಂಡರೂ ಅವರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಹಲ್ಲೆ ನಡೆಸುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಮಕ್ಕಳ ಕಳ್ಳರ ವದಂತಿಗೆ ಯಾರೂ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಮಕ್ಕಳ ಕಳ್ಳರ ಬಗ್ಗೆ ಅನುಮಾನ ವ್ಯಕ್ತವಾದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಅನುಮಾನ ಬಂದಿದೆ ಎಂದು ಅಮಾಯಕ ಜನರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ