ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗರ್ಭಿಣಿಯರಿಗೆ ಉಡಿ ತುಂಬಿ ಹರಸಿದರು.
ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ವೇದಿಕೆ ಮೇಲೆ ಗರ್ಭಿಣಿಯರನ್ನು ಕೂರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೀರೆ, ಕಂಕಣ ಕೊಟ್ಟು, ಬಳೆ ತೊಡಿಸಿ, ತೆಂಗಿನಕಾಯಿ ಉಡುಗರೆಯಾಗಿ ಕೊಟ್ಟರು. ಬಳಿಕ ಪುಷ್ಪವೃಷ್ಟಿಗೈದು, ಆರತಿ ಬೆಳಗಿದರು. ಇದೇ ವೇಳೆ ಗರ್ಭಿಣಿಯರು ಹೆಬ್ಬಾಳ್ಕರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಬಳಿಕ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.