ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ.
ಘಟನೆಯ ವಿವರ: ಕೃಷಿ ಇಲಾಖೆಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಬಿ.ಎನ್. ರಾಜು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಗೌರಿಪುರ ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಆತ್ಮಹತ್ಯೆಗೂ ಮುನ್ನ ರಾಜು ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಅಧಿಕಾರಿಗಳ ಕಿರುಕುಳದ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗಳ ಮೇಲೆ ಗಂಭೀರ ಆರೋಪ: ಸಂಡೂರು ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಎಂಬುವವರು ತಮಗೆ ತೀವ್ರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ರಾಜು ತಮ್ಮ ಡೆತ್ ನೋಟ್ನಲ್ಲಿ ಆರೋಪಿಸಿದ್ದಾರೆ. ಅಧಿಕಾರಿಗಳ ಕಿರುಕುಳದಿಂದ ಮನನೊಂದು ಬದುಕು ಸಾಕಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಪೊಲೀಸ್ ತನಿಖೆ: ಘಟನಾ ಸ್ಥಳಕ್ಕೆ ಚೋರನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ರಾಜು ಬರೆದಿಟ್ಟಿದ್ದಾರೆನ್ನಲಾದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧವೇ ಕಿರುಕುಳದ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Health Tips: ಇವು ‘ದ್ರಾಕ್ಷಿ ಸೇವನೆ’ಯ ಅದ್ಭುತ ಆರೋಗ್ಯಕರ ಪ್ರಯೋಜನಗಳು
BREAKING: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು








