ಹೊಸಪೇಟೆ: ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತದೆ. ಬಾಗಿನ ಅರ್ಪಿಸೋಕೆ ನಾನು ಬರ್ತೀನಿ ಎಂಬುದಾಗಿ ಇಂದು ಸಿ.ಎಂ.ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಲವರ್ಷಗಳಿಂದ ತುಂಗಭದ್ರಾ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ . 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಇಂತಹ ಘಟನೆಗಳಿಗೆ ಯಾರು ಹೊಣೆ ಹೊರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ ಅಸ್ತಿತ್ವದಲ್ಲಿದ್ದು, ಇದರಲ್ಲಿ ಕೇಂದ್ರ ಜಲ ಆಯೋಗ ಹಾಗೂ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ರಾಜ್ಯದ ಸದಸ್ಯರೂ ಇದರಲ್ಲಿದ್ದಾರೆ. ಇಂತಹ ಘಟನೆಗಳಿಗೆ ಕಾರಣವೇನು ಎಂಬುದರ ಬಗ್ಗೆ ವಿಶ್ಲೇಷಣೆ ಅಗತ್ಯ ಎಂದರು.
ನವಲಿ ಜಲಾಶಯ: ಒಪ್ಪಿಗೆ ನಂತರ ಕಾಮಗಾರಿ ಪ್ರಾರಂಭ
ನವಲಿ ಜಲಾಶಯ ನಿರ್ಮಾಣಕ್ಕೆ15 ಸಾವಿರ ಕೋಟಿ ರೂ.ಗಳ ಡಿಪಿಆರ್ ತಯಾರಾಗಿದ್ದು, ಇದು ಅಂತರರಾಜ್ಯ ಯೋಜನೆಯಾಗಿದೆ. ಡಿಪಿಆರ್ ಗೆ ಒಪ್ಪಿಗೆ ದೊರೆತ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಬಾಗಿನ ಅರ್ಪಿಸಲು ನಾನೇ ಬರುತ್ತೇನೆ
ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಆಗಮಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ