ಗದಗ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣ ಮಾಸುವ ಮುನ್ನವೇ, ಇದೀಗ ಗದಗದಲ್ಲಿ ಎರಡು ಗುಂಪುಗಳ ನಡುವೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ನಡೆದಿದೆ.
ಹೌದು ನಿನ್ನೆ ರಾತ್ರಿ ಗದಗ ನಗರದ ಟಾಂಗಾಕೂಟ್ ಸರ್ಕಲ್ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ.
ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.