ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಿಗಮದ ಮಾಜಿ ಎಂ.ಡಿ. ಪದ್ಮನಾಭ್ ಮತ್ತು ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು 7 ದಿನಗಳ ಕಾಲ ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅದೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಮೊದಲು ಎಸ್ಐಟಿಗೆ ವಹಿಸಿತ್ತು. ಅದಾದ ಬಳಿಕ ಇಡಿ ಈ ಒಂದು ಪ್ರಕರಣದಲ್ಲಿ ಎಂಟ್ರಿ ಕೊಟ್ಟಿತ್ತು. ಬಳಿಕ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದರು.
ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ನಿಗಮದ 94.73 ಕೋಟಿ 18 ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿತ್ತು. ಈ ಜಾಡು ಬೆನ್ನತ್ತಿದ್ದಾಗ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ ವರ್ಮಾ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು.
ತನಿಖೆ ಚುರುಕುಗೊಳಿಸಿದಾಗ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣವನ್ನು ನೂರಾರು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿರುವುದು ಕಂಡುಬಂದಿತ್ತು. ಈ ಸಂಬಂಧ ಇತ್ತೀಚೆಗೆ ಸತ್ಯನಾರಾಯಣ ವರ್ಮಾನನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೆ, ಅಕ್ರಮದಲ್ಲಿ ಪದ್ಮನಾಭ್ ಸಹ ಪ್ರಮುಖ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.