ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಹಿರಿಯ ನಾಯಕ ವಿ.ಡಿ. ಸತೀಶನ್ (V D Satheesan) ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಮೇ 18ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಹೈಫೈ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ಹರಿದುಬರಲಿದ್ದು, ಇತ್ತೀಚೆಗಷ್ಟೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಈ ಆಹ್ವಾನ ರಾಜಕೀಯವಾಗಿ ಭಾರಿ ಪ್ರಾಮುಖ್ಯತೆ ಪಡೆದಿದೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮುಖ ಆಕರ್ಷಣೆಯಾಗಲಿದ್ದಾರೆ.ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಮಂತ್ರಣ ಕಳುಹಿಸಲಾಗಿದೆ.
ಮತ್ತೊಂದೆಡೆ, ಕಾಂಗ್ರೆಸ್‌ನ ಹಿರಿಯ ಸಂಸದ ಶಶಿ ತರೂರ್ ಅವರು ಈ ಮಹತ್ವದ ಸಮಾರಂಭದಿಂದ ದೂರ ಉಳಿಯಲಿದ್ದಾರೆ. ಆದರೆ, ಇದಕ್ಕೆ ಯಾವುದೇ ರಾಜಕೀಯ ಭಿನ್ನಾಭಿಪ್ರಾಯ ಕಾರಣವಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ತಮಗಿರುವ ಮುಂಚಿನ ವಿದೇಶಿ ಪ್ರವಾಸದ ಉಲ್ಲೇಖ ಮಾಡಿರುವ ತರೂರ್, “ನನ್ನ ಸಹೋದ್ಯೋಗಿ ವಿ.ಡಿ. ಸತೀಶನ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುತ್ತಿರುವುದಕ್ಕೆ ಬೇಸರವಿದೆ. ನಾನು ಈ ವಾರಾಂತ್ಯದಲ್ಲಿ ಅಮೆರಿಕದ ಬೋಸ್ಟನ್‌ನಲ್ಲಿದ್ದು, ನನ್ನ ಹಳೆಯ ವಿದ್ಯಾಸಂಸ್ಥೆಯಾದ ಫ್ಲೆಚರ್ ಸ್ಕೂಲ್ ಆಫ್ ಲಾ ಅಂಡ್ ಡಿಪ್ಲೊಮಸಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿದ್ದೇನೆ” ಎಂದು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಸತೀಶನ್ ಅವರಿಗೆ ಶುಭ ಹಾರೈಸಿದ್ದಾರೆ.








