ಕೊಲ್ಕತ್ತಾ: ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭಾನುವಾರ ಅರೆಸೈನಿಕ ಪಡೆಗಳು ನಿರ್ಜನ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದಾಗ ವಿನಾಶದ ದೃಶ್ಯಗಳು ಗೋಚರಿಸಿದವು
ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸುವಂತೆ ಆದೇಶಿಸಿರುವ ಕಲ್ಕತ್ತಾ ಹೈಕೋರ್ಟ್, “ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ವಿಧ್ವಂಸಕ ಕೃತ್ಯಗಳ ವರದಿಗಳ ಬಗ್ಗೆ ಕಣ್ಣುಮುಚ್ಚಲು ಸಾಧ್ಯವಿಲ್ಲ” ಎಂದು ಹೇಳಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರವು ಎರಡನೇ ದಿನವೂ ಮುಂದುವರೆದಿದ್ದು, ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 138 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರಲ್ಲಿ, ತಂದೆ ಮತ್ತು ಮಗನನ್ನು ಶನಿವಾರ ಗುಂಪೊಂದು ಕೊಚ್ಚಿ ಕೊಂದರೆ, ಇನ್ನೊಬ್ಬ ಪ್ರತಿಭಟನಾಕಾರ ಗುಂಡೇಟಿಗೆ ಬಲಿಯಾಗಿದ್ದಾನೆ.
ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿಗಾಗಿ ಮನವಿ ಮಾಡಿದರು ಮತ್ತು “ಕೆಲವು ರಾಜಕೀಯ ಪಕ್ಷಗಳು” “ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ” ಎಂದು ಆರೋಪಿಸಿದರು